
ಶಿವಮೊಗ್ಗ : ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ವಿಚಾರವಾಗಿ ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ನಿರ್ಗಮಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಂದೇ ಮಾತರಂ ಗೀತೆಯನ್ನು ಎರಡು ಪ್ಯಾರಾಗಳ ಬಳಿಕ ಮುಕ್ತಾಯಗೊಳಿಸಿದ ಕುರಿತು ಶಾಸಕ ಚನ್ನಬಸಪ್ಪ ಆಕ್ಷೇಪ ವ್ಯಕ್ತಪಡಿಸಿ, ಜಿಲ್ಲಾಡಳಿತದಿಂದ ಸ್ಪಷ್ಟನೆ ಕೇಳಿದರು.
ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿದ ಕುರಿತು ಕೆಲ ಸಭಿಕರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಕಾರ್ಯಕ್ರಮದಲ್ಲಿ ಅನುಸರಿಸಿದ ಗಾಯನದ ಕ್ರಮ ಹಾಗೂ ಸಂಬಂಧಿತ ಮಾರ್ಗಸೂಚಿಗಳ ಕುರಿತು ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕು ಎಂದು ಶಾಸಕ ಚನ್ನಬಸಪ್ಪ ಆಗ್ರಹಿಸಿ, ಕಾರ್ಯಕ್ರಮದಿಂದ ಹೊರನಡೆದರು.