ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅನ್ಯಾಯ ಬೇಡ, ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ರಾಘವೇಂದ್ರ ಅಸಮಾಧಾನ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅನ್ಯಾಯ ಮಾಡದೆ, ಕನಿಷ್ಠ ಶಿವಮೊಗ್ಗ–ಬೆಂಗಳೂರು ನಡುವೆ ವಿಮಾನ ಸೇವೆಯನ್ನಾದರೂ ಮುಂದುವರಿಸಲು ಅವಕಾಶ ಮಾಡಿಕೊಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಇಂಡಿಗೋ ಸಂಸ್ಥೆಯ ವಿಮಾನ ಸೇವೆ ಸ್ಥಗಿತಗೊಂಡಿದೆ. ಇದೀಗ ಉಡಾನ್ ಯೋಜನೆಯಡಿ ಕಾರ್ಯಾಚರಣೆ ನಡೆಸುತ್ತಿರುವ ವಿಮಾನಯಾನ ಸೇವೆಗಳಿಗೂ ಆರ್ಥಿಕ ನೆರವಿನ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 21 ರಿಂದ ವಿಮಾನ ಕಾರ್ಯಾಚರಣೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಇದರಿಂದ ಶಿವಮೊಗ್ಗ ವಿಮಾನ ನಿಲ್ದಾಣದ ವಾಣಿಜ್ಯ ವಿಮಾನ ಸಂಪರ್ಕವೇ ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

2023 ರ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಸುಮಾರು 583 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ವಿಮಾನ ನಿಲ್ದಾಣ ಮಲೆನಾಡು ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುವ ನಿರೀಕ್ಷೆ ಹೊಂದಿತ್ತು. ಆದರೆ ವಿಮಾನ ಸೇವೆಗಳು ಒಂದೊಂದಾಗಿ ಸ್ಥಗಿತಗೊಳ್ಳುತ್ತಿರುವುದು ಬೇಸರದ ಸಂಗತಿ.

– ಬಿ.ವೈ.ರಾಘವೇಂದ್ರ, ಸಂಸದರು


ರಾಜ್ಯದಲ್ಲಿ ಕೆಲವು ವಿಮಾನ ನಿಲ್ದಾಣಗಳು ಖಾಸಗಿ ನಿರ್ವಹಣೆಯಲ್ಲಿದ್ದರೆ, ಉಳಿದ ವಿಮಾನ ನಿಲ್ದಾಣಗಳ ನಿರ್ವಹಣೆಯಲ್ಲಿ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಸೇರಿದಂತೆ ಸಂಬಂಧಪಟ್ಟ ಸಂಸ್ಥೆಗಳು ಪಾತ್ರವಹಿಸುತ್ತಿವೆ. ವಿಮಾನ ಸಂಪರ್ಕ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ವಿವಿಧ ಮಾರ್ಗಗಳ ಪ್ರಸ್ತಾವನೆ ಸಲ್ಲಿಸಬೇಕಿದೆ. ಈಗಾಗಲೇ ಕೆಲವು ಮಾರ್ಗಗಳ ಕುರಿತು ಶಿಫಾರಸು ಮಾಡಲಾಗಿದ್ದು, ಹೆಚ್ಚುವರಿ ಮಾರ್ಗಗಳಿಗೂ ಪ್ರಸ್ತಾವನೆ ಸಲ್ಲಿಸುವ ಅಗತ್ಯವಿದೆ ಎಂದು ಹೇಳಿದರು.

ಮಲೆನಾಡಿನ ಪ್ರಮುಖ ವಾಣಿಜ್ಯ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿರುವ ಶಿವಮೊಗ್ಗಕ್ಕೆ ವಿಮಾನ ಸಂಪರ್ಕ ಕಡಿತಗೊಳ್ಳುವ ಪರಿಸ್ಥಿತಿ ಎದುರಾಗಿರುವುದು ಆತಂಕಕಾರಿ ಬೆಳವಣಿಗೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಈವರೆಗೆ ಸುಮಾರು 4.29 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಇಷ್ಟೊಂದು ಪ್ರಯಾಣಿಕರ ಸಂಚಾರವಿದ್ದರೂ ವಿಮಾನ ಸೇವೆಗಳನ್ನು ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ. ಉಡಾನ್ ಯೋಜನೆಯಡಿ ವಿಮಾನಯಾನ ಸಂಸ್ಥೆಗಳಿಗೆ ನಿಗದಿತ ಅವಧಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಮೂರು ವರ್ಷಗಳ ನಂತರ ಒಂದು ವರ್ಷದ ವಿರಾಮದ ವ್ಯವಸ್ಥೆಯಿದ್ದು, ನಂತರದ ಹಂತದಲ್ಲಿ ಹೊಸ ಯೋಜನೆಯಡಿ ವಿಮಾನ ಸೇವೆಗಳಿಗೆ ಅವಕಾಶ ಕಲ್ಪಿಸುವ ಪ್ರಕ್ರಿಯೆ ನಡೆಯುತ್ತದೆ. ಈ ಅವಧಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ವಿಮಾನಯಾನ ಸಂಸ್ಥೆಗಳಿಗೆ ನೀಡಲಾಗುವ ಪ್ರೋತ್ಸಾಹಧನದ ಪ್ರಮಾಣವನ್ನು ಶೇ.7.5 ರಿಂದ ಶೇ.5ಕ್ಕೆ ಇಳಿಸುವಂತೆ ಮನವಿ ಮಾಡಿದ್ದರೂ ಅದಕ್ಕೆ ಸೂಕ್ತ ಸ್ಪಂದನೆ ದೊರೆತಿಲ್ಲ. ಗುಲ್ಬರ್ಗ ಮತ್ತು ಬೀದರ್ ವಿಮಾನ ಸೇವೆಗಳಿಗೆ ನೀಡುತ್ತಿರುವ ರೀತಿಯಲ್ಲಿಯೇ ಶಿವಮೊಗ್ಗದ ವಿಮಾನ ಸೇವೆಗಳಿಗೂ ಅಗತ್ಯ ಆರ್ಥಿಕ ನೆರವು ನೀಡುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಬೇಕು ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಇಳಿಯುವ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನಗಳು ನಡೆದಿವೆ. ಇಂತಹ ಸಂದರ್ಭದಲ್ಲಿ ವಿಮಾನ ಸೇವೆಗಳು ಸ್ಥಗಿತಗೊಳ್ಳಲು ಅವಕಾಶ ನೀಡಬಾರದು. ಮೂರುವರೆ ವರ್ಷಗಳ ಅವಧಿಗೆ ಸುಮಾರು 15 ಕೋಟಿ ರೂಪಾಯಿ ಹೆಚ್ಚುವರಿ ನೆರವು ನೀಡುವುದು ಸರ್ಕಾರಕ್ಕೆ ದೊಡ್ಡ ಹೊರೆಯಾಗುವುದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ವಿಮಾನಯಾನ ಸಂಸ್ಥೆಗಳಿಗೆ ಅಗತ್ಯ ಪ್ರೋತ್ಸಾಹಧನ ನೀಡಬೇಕು ಎಂದು ಹೇಳಿದರು.

ಕನಿಷ್ಠ ಬೆಂಗಳೂರು ಮಾರ್ಗವನ್ನಾದರೂ ಉಳಿಸಿ :

ಶಿವಮೊಗ್ಗದಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕನಿಷ್ಠ ಒಂದು ವಿಮಾನ ಸೇವೆಯನ್ನಾದರೂ ಮುಂದುವರಿಸಬೇಕು. ಮಲೆನಾಡಿನ ಜನರಿಗೆ ಬೆಂಗಳೂರು ಸಂಪರ್ಕ ಅತ್ಯಂತ ಅಗತ್ಯವಾಗಿದೆ. ವ್ಯಾಪಾರ, ಕೈಗಾರಿಕೆ, ಪ್ರವಾಸೋದ್ಯಮ, ಶಿಕ್ಷಣ ಮತ್ತು ವೈದ್ಯಕೀಯ ಉದ್ದೇಶಗಳಿಗಾಗಿ ಸಂಚರಿಸುವವರಿಗೆ ವಿಮಾನ ಸೇವೆ ಅನುಕೂಲವಾಗಲಿದೆ. ಹೀಗಾಗಿ ಶಿವಮೊಗ್ಗಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಬಾರದು ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್ ಕೆ, ಜಿಲ್ಲಾ ವಕ್ತರರಾದ ಜ್ಯೋತಿ ಪ್ರಕಾಶ್, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ನಗರಧ್ಯಕ್ಷರಾದ ಮೋಹನ್ ರೆಡ್ಡಿ, ಮಾಧ್ಯಮ ಪ್ರಮುಖರಾದ ಚಂದ್ರಶೇಖರ್ ಎಸ್., ಮಂಜುನಾಥ್ ಎನ್., ವಿನ್ಸೆಂಟ್ ರೋಡ್ರಿಗಸ್ ಉಪಸ್ಥಿತರಿದ್ದರು.

Leave a reply

Recent Comments

No comments to show.
Join Us
  • Facebook38.5K
  • X Network32.1K
  • Behance56.2K
  • Instagram18.9K

Stay Informed With the Latest & Most Important News

Categories

Advertisement

Loading Next Post...
Sign In/Sign Up Sidebar Search
Loading

Signing-in 3 seconds...

Signing-up 3 seconds...