
ಶಿವಮೊಗ್ಗ : ಗತವೈಭವದತ್ತ ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನಾಚರಣೆಯು ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗುತ್ತಿದೆ. ಸುಮಾರು 12 ವರ್ಷಗಳ ಬಳಿಕ ಈ ಬಾರಿ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ ದಿನಾಚರಣೆಯು ನಡೆಯಲಿದೆ.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನೆಹರು ಕ್ರೀಡಾಂಗಣಕ್ಕೆ ಭೇಟಿ ನೀಡಿ, ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಸ್ವಾತಂತ್ರ ದಿನಾಚರಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲಿಸಿ, ಅಧಿಕಾರಿಗಳಿಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.
ಗಣ್ಯರ ಆಸನ ವ್ಯವಸ್ಥೆ ಸೇರಿದಂತೆ ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ವಿಶೇಷ ಕಾಳಜಿ ವಹಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆ.15 ರಂದು ಶುಕ್ರವಾರ ಬೆಳಗ್ಗೆ 9.00 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಭದ್ರಾವತಿ ಕ್ಷೇತ್ರದ ಶಾಸಕರಾದ ಬಿ.ಕೆ.ಸಂಗಮೇಶ್ವರ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಳ್ಳುವರು.