
ಶಿವಮೊಗ್ಗ : ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಕಾಲದಲ್ಲಿ ದೊರೆಯದೆ ಪೋಷಕರು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ಶೀಘ್ರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಒದಗಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯಕರ್ತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ. ಶಾಲೆ, ಕಾಲೇಜುಗಳಲ್ಲಿ ದಾಖಲಾತಿ ಪ್ರಕ್ರಿಯೆ ಮುಗಿಯುವ ಹಂತಕ್ಕೆ ಬಂದಿದೆ. ಶಾಲಾ – ಕಾಲೇಜು ಪ್ರವೇಶಕ್ಕೆ, ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹಂಚಿಕೆಗೆ ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯ. ಇವುಗಳಿಗೆ ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸಲ್ಲಿಸಿದ ಅರ್ಜಿಗಳ ವಿಲೇ ಮಾಡಲು ಅಧಿಕಾರಿಗಳಿಗೆ ಸಕಾಲ ನಿಯಮದಂತೆ 21 ದಿನ ಕಾಲಾವಕಾಶ ಇದೆ. ಇದನ್ನೇ ನೆಪವಾಗಿಟ್ಟುಕೊಂಡಿರುವ ಅಧಿಕಾರಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ದಾಖಲೆ ಒದಗಿಸಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಈ ವಿಳಂಬದಿಂದಾಗಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳ ಪ್ರವೇಶ ಸಿಗದೆ ಶಿಕ್ಷಣದಿಂದ ವಂಚಿತವಾಗುವ ಆತಂಕ ಎದುರಿಸುತ್ತಿದ್ದಾರೆ. ಆದ್ದರಿಂದ ತಹಶೀಲ್ದಾರ್ ಅವರು ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಮತ್ತು ಸಂಬಂಧಪಟ್ಟ ನೌಕರರ ಸಭೆ ಕರೆದು, ಸಮಾಲೋಚಿಸಬೇಕು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಕ್ಕಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆ ತ್ವರಿತವಾಗಿ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಕಿಸಾನ್ ಸೆಲ್ ಕಾರ್ಯಾಧ್ಯಕ್ಷ ಗಿರೀಶ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಗೌಡ, ಶಶಿಕುಮಾರ್.ಕೆ.ಆರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮಲಗುಪ್ಪ, ಆಕಾಶ್, ವಿಷ್ಣು, ನಿಖಿಲ್, ನಾಗೇಂದ್ರ, ಬಾಲಾಜಿ.ಹೆಚ್.ಶೆಟ್ಟಿ, ರಾಜೇಶ್, ಪ್ರಜ್ವಲ್, ಭುವನ್ ರಾಜ್, ಪ್ರೀತಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.