
ಶಿವಮೊಗ್ಗ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆ.19 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಭೇಟಿ ನೀಡಲಿದ್ದು, ಕಸ್ತೂರಿರಂಗನ್ ವರದಿ ಕುರಿತು ಸಭೆ ನಡೆಸಲಿದ್ದಾರೆ.
ನಾಳೆ ಬೆಳಿಗ್ಗೆ 10.00 ಗಂಟೆಗೆ ತೀರ್ಥಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದ ಹೆಲಿಪ್ಯಾಡ್‌ಗೆ ಡಿಕೆಶಿ ಆಗಮಿಸಲಿದ್ದು, ನಂತರ ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ, ಮಲೆನಾಡು ಭಾಗದ ರೈತರು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ಭೇಟಿ ನೀಡಲಿದ್ದಾರೆ.
ಸಭೆಯ ನಂತರ ಮಧ್ಯಾಹ್ನ 12.30 ಕ್ಕೆ ಹೆಲಿಕಾಪ್ಟರ್ ಮೂಲಕ ಮುಂದಿನ ಕಾರ್ಯಕ್ರಮಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮುಖ್ಯಮಂತ್ರಿಗಳ ಪ್ರವಾಸದ ವೇಳಾಪಟ್ಟಿಯ ಪ್ರಕಾರ ತೀರ್ಥಹಳ್ಳಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿಯೂ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಭೆ ನಡೆಯಲಿದ್ದು, ವರದಿಯ ಕುರಿತು ಚರ್ಚೆ ನಡೆಸುವ ಕಾರ್ಯಕ್ರಮಗಳು ನಿಗದಿಯಾಗಿದೆ.
ತೀರ್ಥಹಳ್ಳಿ ಮತ್ತು ಬಾಳೆಹೊನ್ನೂರಿನಲ್ಲಿ ನಡೆಯಲಿರುವ ಸಭೆಗಳಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದ ಸ್ಥಳೀಯರ ಅಭಿಪ್ರಾಯಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀರ್ಥಹಳ್ಳಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಪೂರ್ವ ಸಿದ್ಧತೆಯ ಬಗ್ಗೆ ವೀಕ್ಷಣೆ ಮಾಡದರು.