
ಶಿವಮೊಗ್ಗ : ಕೆಲವು ವರ್ಷಗಳಿಂದೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಗೊಳಪಡುವ ರಸ್ತೆ ಕಾಮಗಾರಿಗಳು ಅಪೂರ್ಣಗೊಂಡಿದ್ದು, ಆಯ್ದ ಹಲವು ಸ್ಥಳಗಳಲ್ಲಿ ಆಕಸ್ಮಿಕ ಅಫಘಾತಗಳು ಸಂಭವಿಸಿ, ಸಾವು-ನೋವುಗಳುಂಟಾಗುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಮುಂದಿನ 15 ದಿನಗಳೊಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ರೆಡ್ ಅಲರ್ಟ್, ಎರಡು ದಿನಗಳ ಕಾಲ ಭಾರೀ ಮಳೆ, ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ವಿಶೇಷವಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಆರಂಭಗೊಂಡು ಹಲವು ವರ್ಷಗಳೇ ಸಂದಿದ್ದರೂ ಈವರೆಗೆ ಕಾಮಗಾರಿಗಳು ಅಪೂರ್ಣವಾಗಿದ್ದು, ಜನಸಾಮಾನ್ಯರಿಗೆ, ವಾಹನ ಸಂಚಾರಕ್ಕೆ ತೀವ್ರತರಹದ ಅಡಚಣೆ ಉಂಟಾಗುತ್ತಿದೆ ಮಾತ್ರವಲ್ಲ ಅನೇಕ ಸ್ಥಳಗಳಲ್ಲಿ ನಡೆದ ಆಕಸ್ಮಿಕ ಅಪಘಾತಗಳಿಂದ ಸಾವು-ನೋವುಗಳು ಸಂಭವಿಸಿರುವುದು ವಿಷಾದದ ಸಂಗತಿ.
– ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿಗಳು
ರಾಷ್ಟ್ರೀಯ ಹೆದ್ದಾರಿಯ 28, ಲೋಕೋಪಯೋಗಿ ಇಲಾಖೆಯ 14 ಸ್ಥಳಗಳು ಸೇರಿದಂತೆ ಒಟ್ಟು 51 ಕಪ್ಪುಸ್ಥಳಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕ ಸ್ಥಳಗಳ ಸಮಸ್ಯೆಗಳ ಇತ್ಯರ್ಥಕ್ಕೆ ಈಗಾಗಲೇ ಗಮನಹರಿಸಲಾಗಿದೆ.
– ಬಿ.ನಿಖಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಇದನ್ನೂ ಓದಿ » ಜಿಲ್ಲೆಯಲ್ಲಿ ಇಂದಿನಿಂದ ಐದು ದಿನಗಳವರೆಗೆ ಬೃಹತ್ ನೇಮಕಾತಿ ಅಭಿಯಾನ, 2000ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ, ಎಲ್ಲಿ?
ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಕೂಡಲೇ ಎಚ್ಚೆತ್ತು ಕ್ರಮಕೈಗೊಂಡು ಕಾಮಗಾರಿಗಳನ್ನು ತಕ್ಷಣದಲ್ಲಿ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ನಡೆಯಬಹುದಾದ ಅಫಘಾತಗಳಿಗೆ ತಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದವರು ಎಚ್ಚರಿಸಿದರು.
ಶಿವಮೊಗ್ಗ-ಭದ್ರಾವತಿ ಮಾರ್ಗ ಮದ್ಯದಲ್ಲಿ ಬರುವ ಮಲವಗೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಕಡದಕಟ್ಟೆ ಸ್ಥಳಗಳಲ್ಲಿ ಸಂಚಾರಕ್ಕೆ ತೀವ್ರ ತರಹದ ಅಡಚಣೆಯಾಗುತ್ತಿರುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಅಹವಾಲು ಸಲ್ಲಿಸಿರುವುದಾಗಿ ತಿಳಿಸಿದ ಅವರು, ಅಧಿಕಾರಿಗಳು ಆಗಿರುವ ಕಾಮಗಾರಿಗಳ ವಿಳಂಬ ಕುರಿತು ಸಮರ್ಥನೆ ಮಾಡಿಕೊಳ್ಳುವುದನ್ನು ಸಹಿಸಿಕೊಳ್ಳಲಾಗುವುದಿಲ್ಲ ಎಂದ ಅವರು, ಒಂದು ವರ್ಷದಿಂದ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಸದಿರುವ ಬಗ್ಗೆ ಲೋಕೋಪಯೋಗಿ ಇಲಾಖೆ ಅಭಿಯಂತರರನ್ನು ಪ್ರಶ್ನಿಸಿದ ಅವರು, ಮುಂದಿನ ದಿನಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸುವಂತೆ, ಹಾಗೂ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಅನುಷ್ಠಾನಗೊಂಡ ಬಗ್ಗೆ ವರದಿ ನೀಡುವಂತೆಯೂ ಅವರು ಸೂಚಿಸಿದರು.
ಶಿವಮೊಗ್ಗ-ಸಾಗರ ರಸ್ತೆಯ ಹಲವು ಕಡೆಗಳಲ್ಲಿ ಕೈಗೊಳ್ಳಲಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲವು ಆಯ್ದ ಸ್ಥಳಗಳಲ್ಲಿ ಅರಣ್ಯ ಇಲಾಖೆಯ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪತ್ರದ ಅಗತ್ಯವಿದ್ದು, ಅವುಗಳ ಸಮಸ್ಯೆಯನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದ ಅವರು, ಕಾಮಗಾರಿ ಕೈಗೊಂಡ ಪ್ರದೇಶಗಳಲ್ಲಿ, ತಿರುವುಗಳಲ್ಲಿ ಸೂಚನಾ ಫಲಕಗಳನ್ನು, ನಿಯಂತ್ರಕ ತಡೆಗೋಡೆಗಳನ್ನು ತಾತ್ಕಾಲಿಕವಾಗಿ ನಿರ್ಮಿಸುವಂತೆಯೂ ಸೂಚಿಸಿದರು. ಇದರಿಂದಾಗಿ ಸಂಭಾವ್ಯ ಸಾವು-ನೋವುಗಳನ್ನು ನಿಯಂತ್ರಿಸಬಹುದಾಗಿದೆ ಎಂದರು.
ಇದನ್ನೂ ಓದಿ » ನಗರದಾದ್ಯಂತ ಶಾಲಾ, ಕಾಲೇಜು ವಾಹನಗಳ ದಿಢೀರ್ ತಪಾಸಣೆ, ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕರ ವಿರುದ್ಧ ಕೇಸ್
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ನಿಖಿಲ್ ಅವರು ಮಾತನಾಡಿ, ನಗರದಲ್ಲಿ ಗುರುತಿಸಲಾಗಿರುವ ಕಪ್ಪುಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವುದರ ಜೊತೆಗೆ ರಾತ್ರಿ ಸಮಯದಲ್ಲಿ ಅನಾಹುತಗಳಾಗದಂತೆ ಬೆಳಕಿನ ವ್ಯವಸ್ಥೆ ಮಾಡುವ ಅಗತ್ಯವಿದೆ ಎಂದವರು ನುಡಿದರು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ನಿರೀಕ್ಷಿತ ಪ್ರಮಾಣದಲ್ಲಿ ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ರಸ್ತೆ ದುರಸ್ತಿ ಮತ್ತು ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಿಯಾಯೋಜನೆ ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಿ, ಅನುಮೋದನೆ ಪಡೆದು, ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.
ಅರಣ್ಯ ಇಲಾಖೆಯು ಜಿಲ್ಲೆಯ ರಸ್ತೆಗಳ ಇಕ್ಕೆಲಗಳಲ್ಲಿ ಬೆಳೆದು ನಿಂತ ಹಾಗೂ ಅಪಾಯಕಾರಿ ದುರ್ಬಲ ಮರಗಳನ್ನು ತೆರೆವುಗೊಳಿಸುವಂತೆ, ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅನಾನುಕೂಲವಾಗಿರುವ ಆಡಳಿತಾತ್ಮಕ ಸಮಸ್ಯೆಗಳಿಗೆ ತಕ್ಷಣದಲ್ಲಿ ಪರಿಹಾರ ಕಂಡುಕೊಂಡು ಸಹಕರಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ-ಸವಳಂಗ ಮಾರ್ಗದಲ್ಲಿ ಬರುವ ಜನವಸತಿ ಇರುವ ಕುಂಚೇನಹಳ್ಳಿ ಗ್ರಾಮದಲ್ಲಿ ಜನರ ಓಡಾಟ, ವಾಹನ ಸಂಚಾರಕ್ಕೆ ತೀವ್ರತರಹದ ಅಡಚಣೆ ಉಂಟಾಗುತ್ತಿದ್ದು, ವರ್ತುಲ ಅಥವಾ ಪರ್ಯಾಯ ರಸ್ತೆ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಪಾಲಿಕೆ ವ್ಯಾಪ್ತಿಯ ರಸ್ತೆಗಳು ದುರಸ್ತಿಗೊಳ್ಳಬೇಕು. ಲೋಕೋಪಯೋಗಿ ಇಲಾಖೆಯ ರಸ್ತೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಪೂರ್ವದಲ್ಲಿ ವಾಸ್ತವ ಸಂಗತಿಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಸೆಳೆಯಲು ಅವರೊಂದಿಗೆ ಸಮಾಲೋಚನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಂಬಂಧಿತ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳುವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಬಿ.ನಿಖಿಲ್, ಅರಣ್ಯಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ನಗರಾಭಿವೃದ್ಧಿ ಕೋಶದ ಜಿಲ್ಲಾ ಅಧಿಕಾರಿ ರಂಗಸ್ವಾಮಿ, ಲೋಕೋಪಯೋಗಿ ಇಲಾಖೆ ಅಭಿಯಂತರ ವಿಜಯಕುಮಾರ್‌ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ » ಜಮೀರ್ ಅಹಮದ್ ಗೆ ಡಿಸಿಎಂ ಸ್ಥಾನಕ್ಕಾಗಿ ಮುಸ್ಲಿಂ ಸಮುದಾಯ ಪ್ರತಿಭಟನೆ, ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ!