
ಶಿವಮೊಗ್ಗ : ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿರುವ ಕುರಿತು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲೀಗ ನುರಿತ ವೈದ್ಯರ ಸೇವೆ ಲಭ್ಯ: ಡಾ. ಪೃಥ್ವಿ.ಬಿ.ಸಿ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ತನಿಖೆಗಾಗಿ ಮೂರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ವಿಡಿಯೋದಲ್ಲಿರುವ ವ್ಯಕ್ತಿಗಳನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿವೆ. ಈದ್ ಮೆರವಣಿಗೆಯ ವೇಳೆ ರೆಕಾರ್ಡ್ ಆಗಿರುವ ಇತರ ವಿಡಿಯೋಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿಡಿಯೋ ಸಂಬಂಧ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ (ಸುಮೊಟೊ) ಪ್ರಕರಣ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಅದನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ವಿಡಿಯೋ ಎಲ್ಲಿ, ಯಾವಾಗ ಮತ್ತು ಯಾರಿಂದ ರೆಕಾರ್ಡ್ ಆಗಿದೆ ಎಂಬುದರ ಕುರಿತು ತನಿಖೆ ನಡೆಯಲಿದೆ.
ತನಿಖೆ ಪೂರ್ಣಗೊಂಡ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಗೆ ಸಂಬಂಧಿಸಿದಂತೆ, ಮೆರವಣಿಗೆಯನ್ನು ಪೊಲೀಸ್ ಕ್ಯಾಮರಾಗಳು, ವಿಡಿಯೋ ಜೊತೆಗೆ ಧ್ವನಿ ಮುದ್ರಣವಾಗುವ ಸಿಸಿ ಕ್ಯಾಮರಾ, ಡ್ರೋಣ್‌ನಲ್ಲಿ ಸೆರೆ ಹಿಡಿದಿದ್ದೇವೆ. ಅವುಗಳನ್ನು ಪರಿಶೀಲಿಸುತ್ತೇವೆ. ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.