
ಶಿಕಾರಿಪುರ : ಶಿಕಾರಿಪುರ ಜಮೀನಿನಲ್ಲಿ ಗಾಂಜಾ ಬೆಳೆ ಬೆಳೆದಿದ್ದ ಆರೋಪದ ಮೇರೆಗೆ, ಓರ್ವನನ್ನು ಪೊಲೀಸರು ಬಂಧಿಸಿದ ಘಟನೆ ಶಿಕಾರಿಪುರ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಶುಕ್ರವಾರ (ಅಕ್ಟೋಬರ್ 17) ರಂದು ನಡೆದಿದೆ.
ಬಂಧಿತ ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಎಂದು ಗುರುತಿಸಲಾಗಿದ್ದು, ಈತನನ್ನು ದಸ್ತಗಿರಿ ಮಾಡಿ, ಆರೋಪಿಯ ವಿರುದ್ಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಇದನ್ನು ಓದಿ » ದೀಪಾವಳಿ ಪ್ರಯುಕ್ತ ಅ.21 ರಂದು ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ
ದಾಳಿಯ ವೇಳೆ ಅಂದಾಜು ರೂ.35,000/- ಮೌಲ್ಯದ 13 ಕೆಜಿ ತೂಕದ ಒಟ್ಟಾರೆ 28 ಹಸಿ ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್.ಜಿ.ಕೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಕಾರಿಯಪ್ಪ ಎ.ಜಿ. ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರಮೇಶ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ಶಿಕಾರಿಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಕೇಶವ್ ಇವರ ಮೇಲ್ವಿಚಾರಣೆಯಲ್ಲಿ, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ಆರ್ ಆರ್ ಪಾಟೀಲ್ ಇವರ ನೇತೃತ್ವದಲ್ಲಿ, ಸಿಬ್ಬಂದಿಗಳನ್ನೊಳಗೊಂಡ ತಂಡವು ದಿಂಡದಹಳ್ಳಿ ಗ್ರಾಮದಲ್ಲಿನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ, ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಆರೋಪಿಯ ವಿರುದ್ಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.