ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಾಳೆ (ಏ.14 ರಂದು) ನಗರದ ಕುವೆಂಪು ರಂಗಮಂದಿರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ
ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್‌ರವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 9.00 ಗಂಟೆಗೆ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಜನೆ ಸಲ್ಲಿಸಿ, ಪಾಲಿಕೆ ಆವರಣದಿಂದ ಕುವೆಂಪು ರಂಗಮಂದಿರದವರೆಗೆ ಡಾ. ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರ ಮೆರವಣಿಗೆ ಆಯೋಜಿಸಲಾಗಿದೆ.
ನಂತರ 11.00 ಗಂಟೆಗೆ ಕುವೆಂಪು ರಂಗಮಂದಿರಲ್ಲಿ ವೇದಿಕೆ ಕಾರ್ಯಕ್ರಮ ನೆರವೇರಲಿದೆ. ವೇದಿಕೆ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಸೈನ್ಸ್ ಮೈದಾನದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ನಾಗೇಶ್ ಬಿದರಗೋಡು ಇವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಯ ಸಿದ್ಧತೆಗಳು ಹೇಗಿವೆ ?
- ಪ್ರತಿಮೆ ಅಲಂಕಾರ : ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿನ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ವಚ್ಛಗೊಳಿಸಿ, ಹೂಮಾಲೆಗಳಿಂದ ಅಲಂಕರಿಸಲಾಗುತ್ತದೆ.
- ಮೆರವಣಿಗೆ ಮತ್ತು ಘೋಷಣೆ : ನೀಲಿ ಬಾವುಟಗಳನ್ನು ಹಿಡಿದು ಮೆರವಣಿಗೆಯುದ್ದಕ್ಕೂ “ಜೈ ಭೀಮ್” ಘೋಷಣೆಗಳು ಮೊಳಗುತ್ತಿರುತ್ತವೆ.
- ಸಮಾರಂಭಗಳು : ಸಾರ್ವಜನಿಕ ಸ್ಥಳಗಳಲ್ಲಿ ವಿಚಾರ ಸಂಕಿರಣಗಳು, ಭಾಷಣ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
- ಸಾಮಾಜಿಕ ಕಾರ್ಯಗಳು : ಅಂಬೇಡ್ಕರ್ ಅವರ ಆಶಯದಂತೆ ಸಮಾನತೆ, ಶಿಕ್ಷಣ ಮತ್ತು ಸಬಲೀಕರಣವನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು (ಏಪ್ರಿಲ್ 14) ಪ್ರತಿವರ್ಷ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ದಿನದಂದು ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ, ವಿಚಾರ ಸಂಕಿರಣಗಳು, ಮೆರವಣಿಗೆಗಳು ಮತ್ತು ಬೌದ್ಧಿಕ ಚರ್ಚೆಗಳನ್ನು ಹಮ್ಮಿಕೊಳ್ಳುವ ಮೂಲಕ ಅವರ ತತ್ವಗಳನ್ನು ಸ್ಮರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಯಾರೆಲ್ಲಾ ಭಾಗವಹಿಸಲಿದ್ದಾರೆ :
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪರವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಈ ಆಚರಣೆಯು ಬಾಬಾಸಾಹೇಬ್ ಅವರ ವಿಚಾರಗಳನ್ನು ಜನರಿಗೆ ತಲುಪಿಸಲು ಮತ್ತು ಸಮಾಜದಲ್ಲಿ ಸಮಾನತೆಯನ್ನು ಪಸರಿಸಲು ಒಂದು ಮುಖ್ಯ ಅವಕಾಶವಾಗಿದೆ.